Hasanamba

ಹಾಸನದ ಹಾಸನಾಂಬಾ ದೇವಿ

ಸುಮಾರು ೧೨ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರನಾದ ಶ್ರೀ. ಕೃಷ್ಣಪ್ಪ ನಾಯ್ಕರಿಗೆ ಕನಸಿನಲ್ಲಿ ದೇವಿಯು ‘ನಾನು ಇಂತಹ ಜಾಗದಲ್ಲಿ ಹುತ್ತದ ರೂಪದಲ್ಲಿ ನೆಲೆಸಿದ್ದೇನೆ, ನನಗೊಂದು ಗುಡಿಯನ್ನು ಕಟ್ಟಿಸು’ ಎಂದು ಹೇಳಿ ಮಾಯವಾದಳು. ನಂತರ ಪಾಳೆಗಾರನಾದ ಶ್ರೀ. ಕೃಷ್ಣಪ್ಪ ನಾಯ್ಕರು ಹುತ್ತದರೂಪದಲ್ಲಿದ್ದ ದೇವಿಯ (ಹಾಸನದ ಹಾಸನಾಂಬಾ ದೇವಿ) ಗುಡಿಯನ್ನು ಕಟ್ಟಿಸಿದರು, ಎಂದು ಇಲ್ಲಿನ ನಂಬಿಕೆಯಾಗಿದೆ.

 

ದೇವಿಯರು ನೆಲೆಸಿದ ಪುರಾಣ ಕಥೆ

ಸಪ್ತಮಾತೆಯರು ಕಾಶಿಯಿಂದ ದಕ್ಷಿಣದ ಕಡೆಗೆ ಆಕಾಶಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದಾಗ ಹಾಸನದ ಮನೋಹರವಾದ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆನಿಂತರು. ಆ ಸಪ್ತಮಾತೆಯರಾದ ಬ್ರಾಹ್ಮದೇವಿ, ಮಾಹೇಶ್ವರಿ, ಕೌಮಾರಿ, ವೈಷ್ಣವೀ, ವಹಾಹಿಣಿ, ಇಂದ್ರಾಣಿ  ಮತ್ತು ಚಾಮುಂಡಿ ಇವರಲ್ಲಿ ವೈಷ್ಣವಿ, ಕೌಮಾರಿ, ಮಾಹೇಶ್ವರೀ, ದೇವಿಯರು ದೇವಸ್ಥಾನದಲ್ಲಿ ಹುತ್ತದ ರೂಪದಲ್ಲಿ ಹಾಗೂ ವಹಾಹಿಣಿ, ಇಂದ್ರಾಣಿ, ಚಾಮುಂಡಿ ನಗರದ ಮಧ್ಯಭಾಗದಲ್ಲಿರುವ ದೇವಿಗೆರೆಯಲ್ಲಿ (ಕೆರೆ) ನೆಲೆಸಿರುವರು. ಬ್ರಾಹ್ಮದೇವಿಯು ಹಾಸನದಿಂದ ಸುಮಾರು ೩೫ಕಿ.ಮೀ. ದೂರದಲ್ಲಿರುವ ಕೆಂಚಮ್ಮ ಹೊಸಕೋಟೆಯಲ್ಲಿ ಕೆಂಚಾಂಬೆಯ ಹೆಸರಿನಲ್ಲಿ ನೆಲೆಸಿದ್ದಾಳೆ.

 

ಕ್ಷೇತ್ರ ಮಹಿಮೆ

ಹಾಸನಕ್ಕೆ ಹಿಂದೆ ಸಿಂಹಾಸನಪುರಿ ಎಂದು ಹೆಸರಿತ್ತು. ದೇವಿಯರು ನೆಲೆಸಿದ ನಂತರ ಹಾಸನ ಎಂಬ ಹೆಸರು ಬಂದಿತು. ದೇಶ-ವಿದೇಶಗಳಲ್ಲಿರುವ ಪ್ರತಿಯೊಂದು ದೇವಸ್ಥಾನದಂತೆ ಇಲ್ಲಿ ಪ್ರತಿದಿನ ಭಕ್ತರಿಗೆ ದೇವಿಯರ ದರ್ಶನ ಭಾಗ್ಯವು ಇರುವುದಿಲ್ಲ. ವರ್ಷಕ್ಕೆ ಕೇವಲ ಹತ್ತರಿಂದ ಹನ್ನೆರಡು ದಿನ ಮಾತ್ರ ಬಾಗಿಲು ತೆಗೆದಾಗ ದೇವಿಯರ ದರ್ಶನದ ಲಾಭವಾಗುತ್ತದೆ.

ಆಶ್ವಯುಜ ಮಾಸದ ಹುಣ್ಣಿಮೆ ಕಳೆದ ನಂತರ ಬರುವಂತಹ ಗುರುವಾರದಂದು ಬಾಗಿಲನ್ನು (ವರ್ಷಕೊಮ್ಮೆ) ತೆರೆಯಲಾಗುತ್ತದೆ ಮತ್ತು ಬಲಿಪಾಡ್ಯದ ಮೂರನೇ ದಿನದಂದು ಬೆಳಗ್ಗೆ ದೇವಸ್ಥಾನದ ಬಾಗಿಲನ್ನು ಮುಚ್ಚುತ್ತಾರೆ.

 

ದೇವಸ್ಥಾನದ ವೈಶಿಷ್ಟ್ಯ

ಈ ಸಂದರ್ಭದಲ್ಲಿ ಇರುವ ಇನ್ನೊಂದು ವೈಶಿಷ್ಟ್ಯವೇನೆಂದರೆ ದೇವಸ್ಥಾನದ ಬಾಗಿಲನ್ನು ಮುಚ್ಚುವ ದಿನ ದೇವಿಯರಿಗೆ ಬಳೆ, ಅರಶಿನ, ಕುಂಕುಮ, ಹೂವು ಮುಂತಾದ ಮಂಗಳದ್ರವ್ಯಗಳನ್ನು ಅರ್ಪಿಸಿ ನಂದಾದೀಪವನ್ನು ಉರಿಸಿಡುತ್ತಾರೆ. ಮುಂದಿನ ವರ್ಷ ದೇವಸ್ಥಾನದ ಬಾಗಿಲು ತೆಗೆಯುವವರೆಗೆ ಹೂವು ಬಾಡದೇ ನಂದಾದೀಪ ನಂದದೇ ಹಾಗೆಯೇ ಉರಿಯುತ್ತಿರುತ್ತದೆ. ನಂದಾ ದೀಪ ಆರಿ, ಹೂವು ಬಾಡಿದ್ದಲ್ಲಿ ಆ ವರ್ಷ ದೇಶಕ್ಕೆ ಆಪತ್ತು ಸಂಭವಿಸುವ ಸೂಚನೆಯಾಗಿರುತ್ತದೆ, ಎಂದು ಇಲ್ಲಿನ ನಂಬಿಕೆಯಾಗಿದೆ.

ಈ ದೇವಿಯ ಭಾವಚಿತ್ರವನ್ನು ಯಾರೂ ಮನೆಯಲ್ಲಿ ಇಡುವುದಿಲ್ಲ. ಕಾರಣ ಮನೆಯಲ್ಲಿ ಮಡಿಮೈಲಿಗೆ ಆಚರಿಸದಿದ್ದರೆ ಮನೆಯವರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಊರಿನ ಯಾವುದೇ ಮನೆಯಲ್ಲಿ ಈ ದೇವಿಯ ಭಾವಚಿತ್ರವಿಲ್ಲ.

ದೇವಿಕೆರೆಯ ವೈಶಿಷ್ಟ್ಯ

ನಗರದ ಮಧ್ಯಭಾಗದಲ್ಲಿ ಹಾಗೂ ದೇವಸ್ಥಾನದಿಂದ ೧೦೦ಮೀ. ದೂರದಲ್ಲಿರುವ ದೇವಿಗೆರೆಯಲ್ಲಿ ಮೂವರು ದೇವಿಯರು ವಾಸವಾಗಿದ್ದಾರೆ. ಈ ದೇವಿಯರನ್ನು ಪ್ರತಿ ದಿನ ಭೇಟಿಯಾಗಲು ದೇವಸ್ಥಾನದಿಂದ ಅಕ್ಕಂದಿರು ದೇವಿಗೆರೆಗೆ ಬರುತ್ತಾರೆ ಮತ್ತು ಈ ದೇವಿಗೆರೆಯಲ್ಲಿ ಪ್ರತಿನಿತ್ಯ ಸ್ನಾನ ಮಾಡುತ್ತಾರೆ ಹಾಗೂ ದೇವಸ್ಥಾನದಲ್ಲಿ ಮಾಡಿದ ಪೂಜೆಯ ನೀರಿನ ಅಭಿಷೇಕವು ಈ ದೇವಿಗೆರೆಯಲ್ಲಿ ಬಂದು ಬೀಳುತ್ತದೆ, ಎಂದು ಇಲ್ಲಿನ ನಂಬಿಕೆಯಾಗಿದೆ.

– ಶ್ರೀ.ರಂಗನಾಥ, ಹಾಸನ.

(ಸಾಪ್ತಾಹಿಕ ಸನಾತನ ಪ್ರಭಾತ)

http://balsanskar.com/kannada/lekh/800.html#sthash.Dg0YpRZX.dpuf

ಇವುಗಳೂ ನಿಮಗಿಷ್ಟವಾಗಬಹುದು

ಶಬರಿ ಕೇಳುತ್ತಾಳೆ

ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ …

Leave a Reply

Your email address will not be published. Required fields are marked *